ಒಟ್ಟಾವಾ, ನ.22(DaijiworldNews/AA): ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಕೆನಡಾದ ಅಪರಾಧ ಪ್ರಕರಣಗಳಲ್ಲಿ ಭಾರತದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಮೀಲಾಗಿದ್ದಾರೆ ಎಂಬ ಆರೋಪ ಹಾಗೂ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಕೆನಡಾ ಸರ್ಕಾರ ಅಧಿಕೃತವಾಗಿ ತಿಳಿಸಿದೆ.

ಪ್ರಧಾನಿ ಮೋದಿ, ಸಚಿವ ಜೈಶಂಕರ್ ಅಥವಾ ಎನ್ಎಸ್ಎ ಅಜಿತ್ ದೋವಲ್ ಕೆನಡಾದೊಳಗೆ ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ ಎಂಬುದಕ್ಕೆ ಕೆನಡಾ ಸರ್ಕಾರದ ಬಳಿ ಯಾವುದೇ ಸಾಕ್ಷಿಯಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿಜ್ಜರ್ ಹತ್ಯೆಗೆ ಭಾರತದ ಉನ್ನತ ನಾಯಕರೇ ಸಂಚು ರೂಪಿಸಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇದೀಗ ಕೆನಡಾ ಸರ್ಕಾರ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದೆ.
ಭಾರತದ ವಿರುದ್ಧ ಆರೋಪ ಮಾಡಿ ಪ್ರಕಟವಾದ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಕೆನಡಾ, ಆ ವರದಿ ಊಹಾತ್ಮಕವಾಗಿದ್ದು, ನಿಖರವಾಗಿಲ್ಲ. ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟನೆ ನೀಡಿದೆ.