ಟೆಹ್ರಾನ್, ಮೇ 20(DaijiworldNews/ AA): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪರ್ವತ ಶ್ರೇಣಿಗಳ ನಡುವೆ ಭಾನುವಾರ ಪತನಗೊಂಡಿದ್ದು, ಈ ದುರ್ಘಟನೆಯಲ್ಲಿ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಹೆಲಿಕಾಪ್ಟರ್ ನಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಕೂಡ ಪ್ರಯಾಣಿಸುತ್ತಿದ್ದರು. ಈ ಅವಘಡದಲ್ಲಿ ಅವರೆಲ್ಲರೂ ಕೂಡ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಹೆಲಿಕಾಪ್ಟರ್ ಇರಾನ್ ನ ವಾಯುವ್ಯ ಪರ್ವತ ಪ್ರದೇಶದ ಜೋಲ್ಫಾದಲ್ಲಿ ಪತನಗೊಂಡಿತ್ತು. ಹೆಲಿಕಾಪ್ಟರ್ ಹವಾಮಾನ ವೈಪ್ಯರಿತ್ಯದಿಂದಾಗಿ ಪತನಗೊಂಡಿದೆ. ಹೆಲಿಕಾಪ್ಟರ್ ಹಾರಾಟದ ಸುಮಾರು 30 ನಿಮಿಷಗಳ ಬಳಿಕ ಸಂಪರ್ಕವನ್ನು ಕಳೆದುಕೊಂಡಿತ್ತು. ಹೆಲಿಕಾಪ್ಟರ್ ಪತನಗೊಂಡ ಸ್ಥಳವನ್ನು ಮಾನವರಹಿತ ವಿಮಾನ ಗುರುತಿಸಿದೆ ಎನ್ನಲಾಗಿದೆ. ಇನ್ನು ಪತನಗೊಂಡಿದ್ದ ಹೆಲಿಕಾಪ್ಟರ್ನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.