ಮಂಗಳೂರು, ಮೇ 25 (Daijiworld News/MSP): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸಮ್ಮತಿ ನೀಡಿದೆ. ಇದರಿಂದ ಎತ್ತಿನಹೊಳೆ ಯೋಜನೆಯ ವಿರುದ್ಧದ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.
ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಮೇ 13ರಂದು ಈ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಎನ್ಜಿಟಿ ಪೀಠ, ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಶುಕ್ರವಾರ ಇದರ ಅಂತಿಮ ತೀರ್ಪು ಪ್ರಕಟವಾಗಿದೆ.
ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಎನ್ಜಿಟಿ ಮುಂದೆ ಕೆ.ಎನ್. ಸೋಮಶೇಖರ್ ಮತ್ತು ಸಕಲೇಶಪುರದ ವಕೀಲ ಕಿಶೋರ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಕುಡಿಯುವ ನೀರಿನ ಯೋಜನೆಯಾಗಿರುವ ಹಿನ್ನೆಲೆಯಲ್ಲಿ ಇತರ ಆಕ್ಷೇಪಗಳು ಪರಿಗಣನೆಗೆ ಬರುವುದಿಲ್ಲವಾದ್ದರಿಂದ ಅರ್ಜಿ ಮತ್ತು ಮೇಲ್ಮನವಿ ಅರ್ಜಿ ಯನ್ನು ತಿರಸ್ಕರಿಸುವುದಾಗಿ ನ್ಯಾಯಪೀಠ ಆದೇಶ ಹೊರಡಿಸಿದೆ. ಆದರೂ ಪರಿಸರಕ್ಕೆ ಧಕ್ಕೆ ಆಗುವುದಾದಲ್ಲಿ ಸಂಬಂಧಪಟ್ಟ ಇಲಾಖೆಗಳು ಮಧ್ಯಪ್ರವೇಶ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಬಹುದು. ಜತೆಗೆ ಪೂರಕ ಅಧ್ಯಯನ ನಡೆಸಲು ಅವಕಾಶವಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.