ಮಂಗಳೂರು, ಆ.23(DaijiworldNews/AA): ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ.
ಹರೀಶ್ ಪೂಂಜಾ ಅವರು ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತ್ತು. ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನೋಟಿಸ್ ನೀಡದೆ ಪೊಲೀಸರು ಕ್ರಮಕ್ಕೆ ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಯಾಗಿ ಅರ್ಜಿದಾರರು ಠಾಣೆಗೆ ಹೋಗಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿಲ್ಲ ಮತ್ತು ಕಾನೂನು ಕೈಗೆತ್ತಿಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಈ ವೇಳೆ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಅರ್ಜಿದಾರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಯಬೇಕು. ಆದ್ದರಿಂದ ಎಫ್ಐಆರ್ ರದ್ದುಪಡಿಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ವಾದ-ಪ್ರತಿವಾದ ಬಳಿಕ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿತು. ಅಲ್ಲದೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಆಗಸ್ಟ್ 1ರಂದು ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿತು.