ಉಡುಪಿ, ಸೆ.1(DaijiworldNews/AA): ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟೆಂಬರ್ 15 ರಂದು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಬೃಹತ್ ಮಾನವ ಸರಪಳಿಯನ್ನು ಬೀದರ್ನಿಂದ ಚಾಮರಾಜನಗರದ ವರೆಗೆ ರಚಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಮೂಲಕ ವಿಭಿನ್ನವಾಗಿ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದಿಂದ ಕಾಪು ತಾಲ್ಲೂಕಿನ ಹೆಜಮಾಡಿ ಗ್ರಾಮದವರೆಗೆ 26 ಗ್ರಾಮ ಪಂಚಾಯಿತಿಗಳಲ್ಲಿ 100 ಕಿ.ಮೀ. ವರೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿ, ಮಾನವ ಸರಪಳಿ ರಚಿಸಲಿದ್ದಾರೆ. ಮಾನವ ಸರಪಳಿ ನಿರ್ಮಾಣಕ್ಕೆ ಪ್ರತೀ 100 ಮೀ. ಗೆ ಒಬ್ಬರನ್ನು ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ಗಳು ಇದರ ಉಸ್ತುವಾರಿ ವಹಿಸಬೇಕು. ಮಾನವ ಸರಪಳಿ ಕಾರ್ಯಕ್ರಮದ ನಂತರ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುವುದು ಎಂದು ಹೇಳಿದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಳ್ಳಲು ಆನ್ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಇದರಲ್ಲಿ ಭಾಗವಹಿಸಿದವರಿಗೆ ಭಾವಚಿತ್ರವನ್ನು ಒಳಗೊಂಡ ಪ್ರಮಾಣಪತ್ರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.