ಮಂಗಳೂರು, ಮೇ 27(Daijiworld News/MSP): ಮಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಂಡಿದ್ದರೂ ಸಮರ್ಪಕವಾಗಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿರಲಿಲ್ಲ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪಾಲಿಕೆಯ ಹಿರಿಯ ಅಧಿಕಾರಿಗಳು ಬೆಂಗಳೂರಿಗೆ ದೌಡಾಯಿಸಿದ್ದು, ಅಲ್ಲಿ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ಮಂಗಳೂರು ನಗರ ಪಾಲಿಕೆ ಆಯುಕ್ತ ನಾರಾಯಣಪ್ಪ ಸೇರಿದಂತೆ ಹಲವು ಮಂದಿ ನೀರಾವರಿ ಇಲಾಖೆ ಅಧಿಕಾರಿಗಳು, ಇಂಜಿನಿಯರ್ಗಳು ಬೆಂಗಳೂರಿಗೆ ತೆರಳಿದ್ದು, ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸದ್ಯ ಮಂಗಳೂರು ನಗರ ಪಾಲಿಕೆಗೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಇಳಿಕೆ ಕಂಡಿದೆ. ರೇಶನಿಂಗ್ ಸಿಸ್ಟಂ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆಯಾದರೂ, ಈ ನೀರು ಸಾಕಾಗದ ಕಾರಣ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆರೆ, ಬೋರ್ವೆಲ್ಗಳನ್ನು ಕೊರೆಯಲಾಗುತ್ತಿದೆ. ತುಂಬೆಯಲ್ಲಿ ನೂತನ ಡ್ಯಾಂನಲ್ಲಿ ೭ ಮೀಟರ್ವರೆಗೂ ನೀರು ನಿಲ್ಲಿಸಬಹುದಾಗಿದ್ದರೂ ೬ ಮೀಟರ್ಗೆ ನೀರು ನಿಲ್ಲಿಸಿದ್ದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂಬ ಬಗ್ಗೆಯೂ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.