ಉಡುಪಿ, ಮೇ29(Daijiworld News/SS): ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದ್ದು, ಕಾರ್ಯಕ್ರಮಕ್ಕೆ ವಿಶ್ವದ ಗಣ್ಯಾತಿ ಗಣ್ಯರು ಭಾಗವಹಿಸುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮೂಲಗಳ ಪ್ರಕಾರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಾಂಗ್ಲಾದೇಶ, ಮ್ಯಾನ್ಮಾರ್, ಶ್ರೀಲಂಕಾ, ಥಾಯ್ಲೆಂಡ್, ನೇಪಾಳ, ಭೂತಾನ ಸೇರಿದಂತೆ ದೇಶ, ವಿದೇಶಗಳ ಆರು ಸಾವಿರಕ್ಕೂ ಹೆಚ್ಚು ಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯೂ ಭಾಗವಹಿಸಲಿದ್ದಾರೆ. ಮೇ.30ರಂದು ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಯೂ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಮೇ.30ರಂದು 7.00 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ಬಂದಿದ್ದು, ಗುರುವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.
ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನ ಮುಂಭಾಗ ನರೇಂದ್ರ ಮೋದಿ ಅವರು ಪ್ರತಿಜ್ಞೆ ಸ್ವೀಕಾರ ಮಾಡಲಿದ್ಧಾರೆ. ಈ ಬಾರಿ ದರ್ಬಾರ್ ಹಾಲ್ ಬದಲು ಫೋರ್ಕೋರ್ಟ್ನಲ್ಲಿ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ದೇಶ-ವಿದೇಶದ ಸುಮಾರು 6,500 ಗಣ್ಯ ಅತಿಥಿಗಳ ಹಾಜರಾಗುವ ಸಾಧ್ಯತೆ ಇದೆ.