ಉಡುಪಿ, ಮೇ30(Daijiworld News/SS): ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸರ್ಕಾರ ಸ್ಥಾಪಿಸಿದ್ದಾರೆ. ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್'ನಲ್ಲಿ 7 ಗಂಟೆ ನಂತರ ನಡೆದ ಸಮಾರಂಭದಲ್ಲಿ ನರೇಂದ್ರ ದಾಮೋದರ್ ದಾಸ್ ಮೋದಿ ಅವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಹಿನ್ನಲೆ ಪ್ರತಿಕ್ರಿಯಿಸಿದ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ, ಕಳೆದ ಐದು ವರ್ಷಗಳಲ್ಲಿ ಭಾರತ ದೇಶದ ಸಂಸ್ಕೃತಿ, ಪರಂಪರೆಯನ್ನು ಪ್ರಪಂಚದ ಉದ್ದಗಲಕ್ಕೂ ಪಸರಿಸಿ, ದೇಶದ ಪಾತಕೆಯನ್ನು ಜಗತ್ತಿನ ಎಲ್ಲಾ ದೇಶಗಳಲ್ಲಿ ಹಾರಿಸಿದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಭೂತಪೂರ್ವ ಜಯ ದಾಖಲಿಸಿ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವುದು ತುಂಬಾ ಸಂತೋಷದ ವಿಚಾರ ಎಂದು ಹೇಳಿದ್ದಾರೆ.
ಮೋದಿ ದೇಶಕ್ಕಾಗಿ ಹಗಲಿರುಳು ಶ್ರಮಿಸುವ ಅಪ್ಪಟ ದೇಶಪ್ರೇಮಿ. ದೇಶಕ್ಕಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟು, ರಾಷ್ಟ್ರ ಚಿಂತನೆಯನ್ನು ಮೈಗೂಡಿಸಿಕೊಂಡಿರುವ ಜನನಾಯಕ. ಕಳೆದ 5 ವರ್ಷಗಳಲ್ಲಿ ಮಾಡಿದ ದೇಶದ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳಿಗೆ ಭಾರತೀಯರು ಪೂರ್ಣ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
ಈ ಬಾರಿ ಅವರಿಗೆ ಇನ್ನಷ್ಟು ಹೆಚ್ಚಿನ ದೇಶಸೇವೆ ಮಾಡುವ ಶಕ್ತಿಯನ್ನು ಶ್ರೀಕೃಷ್ಣ ಮುಖ್ಯಪ್ರಾಣ ದೇವರು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.