ಮಂಗಳೂರು, ಅ.16(DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಹಮ್ಮದ್ ಅಬ್ದುಲ್ ಫಯಾನ್ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದಾನೆ.
ಆರೋಪಿಯ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಜೇಶ್ವರದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಂದ್ರ ಬಿ, ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಸ್, ಅಧಿಕಾರಿಗಳಾದ ಹೆಚ್ ಸಿ ಮೊಹಮ್ಮದ್ ಶರೀಫ್, ಪಿ ಸಿ ಸಂತೋಷ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇನ್ನು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.