ಮಂಗಳೂರು, ಅ.30(DaijiworldNews/AA): ಎಳೆಯ ಮಕ್ಕಳನ್ನು ಪೋಷಿಸಿ ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರ ಸೇವೆ ಮಹತ್ತರವಾದುದು ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಬಿಜೈ ಕಾಪಿಕಾಡ್ನ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ನಡೆದ ಪುಟಾಣಿಗಳ ಜತೆ ಹಣತೆಯೊಂದಿಗೆ ದೀಪಾವಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಮರ್ಪಕ ಕುಡಿಯುವ ನೀರು, ಶೌಚಾಲಯ ಸಹಿತ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ಅಗತ್ಯ ನೆರವು ನೀಡಲು ರೆಡ್ಕ್ರಾಸ್ ಸಂಸ್ಥೆ ಬದ್ಧವಾಗಿದೆ ಎಂದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹಿರಿಯ ಪತ್ರಕರ್ತ ಕೇಶವ ಕುಂದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಂಗನವಾಡಿ ಶಿಕ್ಷಕಿ ನಂದಾ ಸುರೇಶ್, ಸಹಾಯಕಿ ಲಕ್ಷ್ಮಿ, ಆಶಾ ಕಾರ್ಯಕರ್ತೆ ಪ್ರಭಾ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.