ಮಂಗಳೂರು,ನ.06(DaijiworldNews/TA):ಸೌತಡ್ಡ ಮಹಾಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ಉಳಿಸಿ ರಕ್ಷಿಸಲು ಸೂಕ್ತ ಕ್ರಮಕ್ಕೆ ಆಗ್ರಹಿಸಬೇಕು ಎಂದು ದೇಗುಲದ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಕೊಕ್ಕಡ ಹೇಳಿದರು.
ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿರುವ ವಿಚಾರಗಳನ್ನು ಮುಂದಿಟ್ಟುಕೊಂಡು ದೇವಳದ ಸದಸ್ಯರು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿರುವ ವಿಚಾರದ ಕುರಿತು, ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೊಕ್ಕಡ ಗ್ರಾಮದ ಸೌತಡ್ಕ ಎಂಬಲ್ಲಿ ಆನಾದಿಕಾಲದಿಂದ ಬಯಲು ಗಣಪತಿ ದೇವಾಲಯವಿದ್ದು ಇತ್ತೀಚೆಗೆ ದೇಶ ವಿದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಈ ದೇವಾಲಯ 1995ನೇ ಇಸವಿಯಲ್ಲಿ ಮುಜರಾಯಿ ಇಲಾಖೆಯ ಅಧೀನಕ್ಕೆ ಒಳಪಟ್ಟಿತ್ತು. ಇದೀಗ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಲಾಗಿದೆ.
ಈ ಕಾರಣದಿಂದ ದೇವಸ್ಥಾನದ ಹಿತ ಕಾಪಾಡಿ ನ್ಯಾಯ ಪಡೆಯುವ ಉದ್ದೇಶದಿಂದ ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ವತಿಯಿಂದ ನವಂಬರ್ 11ರಂದು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನದ ಎದುರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕೋಶಾಧಿಕಾರಿ ವಿಶ್ವನಾಥ್ ಕೊಲ್ಲಾಜೆ, ಉಪಾಧ್ಯಕ್ಷರಾದ ಪ್ರಶಾಂತ ರೈ ಗೋಳಿತೊಟ್ಟು, ಸಮಿತಿ ಸದಸ್ಯರಾದ ಶ್ರೀವತ್ಸ ಉಪಸ್ಥಿತರಿದ್ದರು.