ಕಡಬ, ನ.23(DaijiworldNews/AA): ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ.
ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.