ಮಂಗಳೂರು, ಜೂ11(Daijiworld News/SS): ನಗರದ ಶಾಲಾ ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ 48 ವಾಹನಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ, ಕೆಲ ದಿನಗಳ ಹಿಂದೆ ಶಾಲಾ ಆಡಳಿತ ಮಂಡಳಿ ಸಭೆ ಕರೆಯಲಾಗಿತ್ತು. ಆದರೂ ಕೆಲವು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ಕೊಂಡೊಯ್ಯಲಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿ 48 ವಾಹನಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಜೊತೆಗೆ 2 ವಾರದಲ್ಲಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ 175 ವಾಹನಗಳು ಹಾಗೂ 48 ಸ್ಕೂಲ್ ವ್ಯಾನ್, ಆಟೋಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ತಪಾಸಣೆ, ನಿಯಮ ಪಾಲನೆಯ ಬಗ್ಗೆ ನಿಗಾ ವಹಿಸುವ ಹೊಣೆಗಾರಿಕೆ ಸಂಚಾರ ಪೊಲೀಸರು ಹಾಗೂ ಸಾರಿಗೆ ಇಲಾಖೆ ಮೇಲಿದೆ. ಶಾಲಾ ವಾಹನದಲ್ಲಿ ಇಂತಿಷ್ಟೇ ಮಕ್ಕಳನ್ನು ಕರೆದೊಯ್ಯಬೇಕು ಎಂಬ ಮಾರ್ಗಸೂಚಿ ಇದೆ. ಆದರೆ, ನಿಯಮಗಳನ್ನು ಪಾಲಿಸುತ್ತಿರುವುದು ಬೆರಳೆಣಿಕೆಯಷ್ಟು ಶಾಲೆಗಳು ಮಾತ್ರ. ಈ ಬಗ್ಗೆ ಎಚ್ಚರ ವಹಿಸಬೇಕಾದ ಅನಿವಾರ್ಯತೆ ಇದೆ.