ಮಂಗಳೂರು, ಜೂ11(Daijiworld News/SS): ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉಳ್ಳಾಲ ಸೇರಿದಂತೆ ಸೋಮೇಶ್ವರ, ಉಚ್ಚಿಲ ಸಮುದ್ರ ತೀರದಲ್ಲಿ ಕಡಲ್ಕೊರೆತ ಸಮಸ್ಯೆ ಉದ್ಬವಿಸಿದೆ. ಈ ಪ್ರದೇಶದ ಸುಮಾರು 50ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿದ್ದು, ಕಡಲ ತಡಿಯ ಜನರು ಆತಂಕಗೊಂಡಿದ್ದಾರೆ. ಉಳ್ಳಾಲದ ಮೊಗವೀರಪಟ್ಣ ಕೈಕೋ, ಕಿಲೇರಿಯಾನಗರ, ಸೀಗ್ರೌಂಡ್ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು, ಅಪಾಯದ ಅಂಚಿನಲ್ಲಿವೆ ಎಂದು ತಿಳಿದುಬಂದಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯಲ್ಲಿ ಚಂಡಮಾರುತದ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಭಾರೀ ಗಾಳಿ ಮಳೆಯ ಬಗ್ಗೆ ಎಚ್ಚರಿಕೆ ರವಾನಿಸಿದೆ. ಇಂದಿನಿಂದ ಜೂನ್ 13ರ ವರೆಗೆ ಮೂರು ದಿನಗಳ ಕಾಲ ಕೇರಳ ಮತ್ತು ಕರ್ನಾಟಕ ಕರಾವಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮಂಗಳೂರಿನ ಬಂದರುಗಳಲ್ಲಿ ಮುನ್ನೆಚ್ಚರಿಕೆಯ ಸಂಕೇತದ ಬಾವುಟ ಹಾರಿಸುವಂತೆ ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರವಾಗಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಉಳ್ಳಾಲ, ಸೋಮೇಶ್ವರ, ಪಣಂಬೂರು ಸೇರಿದಂತೆ ಇತರ ಬೀಚ್ಗಳಲ್ಲಿ ಈಗಾಗಲೇ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.