ಬೆಂಗಳೂರು ಡಿ 3 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಾಜರಿರಲು ಮುಖ್ಯಮಂತ್ರಿ ನಿರ್ಧರಿಸಿರುವುದು ಈ ಪ್ರಯಾಣಕ್ಕೆ ಕಾರಣ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯವರ ನಾಮಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರವೇ ಸೂಚಕರಾಗಿ ಸಹಿ ಮಾಡಿದ್ದು,ಡಿ 4 ರ ಸೋಮವಾರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಪಸ್ಥಿತರಿರಲು ಭಾನುವಾರ ಸಂಜೆ ದೆಹಲಿಗೆ ಪ್ರಯಾಣಿಸಲಿದ್ದಾರೆ.ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಳಿನ ರಾಹುಲ್ ಗಾಂಧಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ನಂತರ ನಾಳೆ ರಾತ್ರಿ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ. ಇನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಅಧ್ಯಕ್ಷ ಸ್ಥಾನದ ನಾಮಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಸೇರಿದಂತೆ ರಾಜ್ಯದ 20 ಪ್ರಮುಖ ಮುಖಂಡರು ಸೂಚಕರಾಗಿ ಸಹಿ ಮಾಡಿದ್ದಾರೆ.