ಉಡುಪಿ, ಜೂ18(Daijiworld News/SS): ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜತೆಯಾಗಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ ತಡೆ ಮತ್ತು ಮಕ್ಕಳ ಸಹಾಯವಾಣಿ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನದೊಳಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ಪ್ರತೀ ತಿಂಗಳು ಮಕ್ಕಳ ಸಭೆ ನಡೆಸಿ, ಸಹಾಯವಾಣಿಗೆ ಬಂದ ಕರೆಗಳ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ಮಾಡಬೇಕು. ಬಳಿಕ ಈ ಬಗ್ಗೆ ತಾಲೂಕು ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಬೇಕು. ಈ ಮೂಲಕ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜತೆಯಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಜಿಲ್ಲೆಯಾದ್ಯಂತ ಮಕ್ಕಳ ಸಹಾಯವಾಣಿ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕ ಸ್ಥಳಗಳಲ್ಲಿ ಗೋಡೆ ಬರಹ, ಪೋಸ್ಟರ್ಗಳನ್ನು ಅಂಟಿಸುವುದು, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು, ಆಟೋ ರಿಕ್ಷಾ, ಬಸ್ಗಳಲ್ಲಿ ಪೋಸ್ಟರ್ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬಹುದಾಗಿದೆ ಎಂದು ಸಲಹೆ ನೀಡಿದರು.
ಗ್ರಾಮ ಮಟ್ಟದಲ್ಲಿ ಒಂದೊಂದು ಪ್ರದೇಶದಲ್ಲಿ ಒಬ್ಬ ಮಕ್ಕಳ ನಾಯಕನನ್ನು ಗುರುತಿಸಿ ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಬೇಕು. ಆರೋಗ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆ ಕಾರ್ಯಕ್ರಮಗಳಲ್ಲಿ ಮಕ್ಕಳ ಸಹಾಯವಾಣಿಯ ಲೋಗೋ ಬಳಸಬೇಕು ಎಂದು ಆದೇಶ ನೀಡಿದ್ದಾರೆ.