ಬಂಟ್ವಾಳ, ಜೂ 25 (Daijiworld News/MSP): ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಖಾಸಗಿ ಹಾಗೂ ಸರ್ಕಾರಿ ಬಸ್ಸು ಸೇರಿ 9 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕುರಿತು ವಿಟ್ಲ ಮತ್ತು ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಕೊಡದಂತೆ ದ.ಕ ಜಿಲ್ಲಾ ಪೊಲೀಸ್ ಇಲಾಖೆ ವಿನಂತಿಸಿದೆ.
ಕೆಲ ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿರುವು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದು ಅತೀ ಶೀಘ್ರದಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಪೊಲೀಸರ ತಂಡ ರಚನೆ ಮಾಡಿದ್ದು ಸಾರ್ವಜನಿಕರು ಈ ವಿಚಾರವಾಗಿ ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗಬಾರದಾಗಿ ಹಾಗೂ ಇಲ್ಲಸಲ್ಲದ ಸಾಮಾಜಿಕ ಜಾಲತಾಣದಲ್ಲಿ ಬರುವ ಸಂದೇಶಗಳಿಗೆ ಕಿವಿಕೊಡದಂತೆ ವಿನಂತಿಸಿದ್ದಾರೆ
ಈ ಪ್ರಕರಣದ ಬಗ್ಗೆ ಬಂಟ್ವಾಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿದ್ದು ಸೂಕ್ತ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ.
ವಿಟ್ಲ ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಖಾಸಗಿ ಹಾಗೂ ಸರ್ಕಾರಿ ಬಸ್ ಗಳ ಮೇಲೆ ಕಲ್ಲು ತೂರಾಟ
ನಡೆಸಿದ ಪರಿಣಾಮ ಬಸ್ ಚಾಲಕ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿತ್ತು. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಪ್ರಖಂಡದ ಭಜರಂಗ ದಳದ ಮುಖಂಡ ಅಕ್ಷಯ್ ರಜಪೂತ್ ಸೇರಿದಂತೆ ಹಲವು ಮಂದಿ ಮೇಲೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿತ್ತು.