ಬಂಟ್ವಾಳ, ಜು 03:(Daijiworld News/SM): ಪುತ್ತೂರಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜತೆ ಆರೋಪಿಯೋರ್ವನ ಫೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿ ಶಾಸಕರ ಗೌರವಕ್ಕೆ ಧಕ್ಕೆ ತರುವ ಘಟನೆಗಳು ನಡೆಯುತ್ತಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.
ಈ ಬಗ್ಗೆ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರಲ್ಲಿ ಮಾತುಕತೆ ನಡೆಸಿ ಘಟನೆಯ ಆರೋಪಿತರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದ್ದಾರೆ. ಅಲ್ಲದೆ ಇಂತಹ ಕೃತ್ಯಗಳು ನಡೆಯದಂತೆ ಕಡಿವಾಣ ಹಾಕುವುದು ಹಾಗೂ ಸೂಕ್ತ ಕಾನೂನು ಕ್ರಮಕೈಗೊಳ್ಳುವುದರ ಬಗ್ಗೆಯೂ ಮಾತುಕತೆ ನಡೆಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡಿ ಶಾಸಕರ ಬಗ್ಗೆ ಅಪಪ್ರಚಾರ ನಡೆಸುತ್ತಿರುವವರ ವಿರುದ್ದ ಈಗಾಗಲೇ ಪೋಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಬಗ್ಗೆ ಸುಳ್ಳು ಸುದ್ದಿ ಪ್ರಚಾರ ಮಾಡುವುದರ ಬಗ್ಗೆಯೂ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.