ಬೈಂದೂರು, ಜು 05 (Daijiworld News/SM): ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಡೋಲಾಯಮಾನ ಸ್ಥಿತಿಯಲ್ಲಿದೆ. ಬಿಜೆಪಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಸರಕಾರ ಅನುದಾನ ನೀಡುತ್ತಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು, ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದ್ದಾರೆ.
ಬೈಂದೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬಿಜೆಪಿಯನ್ನು ಮತ್ತಷ್ಟು ಸದೃಢಗೊಳಿಸಲು ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಬೇಕಾಗಿದೆ. ಬೂತ್ ಮಟ್ಟದಲ್ಲಿ ಪ್ರತಿಯೊಂದು ಮನೆಯನ್ನು ಭೇಟಿ ಮಾಡಿ ಮತದಾರರನ್ನು ಬಿಜೆಪಿ ಸದಸ್ಯರನ್ನಾಗಿ ಸೇರ್ಪಡೆಗೊಳಿಸುವ ಪ್ರಯತ್ನ ಕಾರ್ಯಕರ್ತರು ನಡೆಸಬೇಕು ಎಂದರು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಪ್ರವೀಣ್, ರಾಧಾಕೃಷ್ಣ, ಬಿಜೆಪಿ ಬೈಂದೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.