ಮಂಗಳೂರು, ಜು 08 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ಅದರಲ್ಲೂ ವಿದ್ಯಾರ್ಥಿನಿಗಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಹಾಯವಾಣಿ ಆರಂಭಿಸಲಾಗುವುದೆಂದು ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ತಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಬಗ್ಗೆ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಶೈಕ್ಷಣಿಕ ಸಂಸ್ಥೆಗಳ, ವಸತಿ ನಿಲಯಗಳ ಹಾಗೂ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಲಾಗಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ವಿದ್ಯಾರ್ಥಿಗಳಿಗೆ ವೈಯಕ್ತಿಕ ಮಾರ್ಗದರ್ಶನ ನೀಡಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ನಾಗರಿಕರಿಗೆ ತುರ್ತು ಸಂದರ್ಭದಲ್ಲಿ ನೆರವಾಗಲು ಆರಂಭಿಸಲಾಗಿರುವ ಸಹಾವಾಣಿ 1077 ಉಚಿತ ದೂರವಾಣಿ ಸಂಖ್ಯೆಗೆ ವಿದ್ಯಾರ್ಥಿಗಳ ಸುರಕ್ಷತೆಯ ಬಗೆಗಿನ ದೂರುಗಳನ್ನು ಸ್ವೀಕರಿಸಲು ಬಳಸಲಾಗುವುದು. ಈ ದೂರುಗಳನ್ನು ಸ್ವೀಕರಿಸಿದ ಬಳಿಕ ಸೂಕ್ತ ತಜ್ಞ ವ್ಯಕ್ತಿಗಳ ಮೂಲಕ ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು ಎಂದರು.