ಉಡುಪಿ, ಜು 19 (DaijiworldNews/SM): ಜುಲೈ 20ರಿಂದ ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದವರು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾ ಹೆಬ್ಸಿಬಾ ರಾಣಿ ಆದೇಶ ನೀಡಿದ್ದಾರೆ. ಇನ್ನು ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಂಬಂಧಿಸಿದ ಕೇಂದ್ರದಲ್ಲೇ ಇರುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಇನ್ನು ತಗ್ಗು ಪ್ರದೇಶಗಳು, ಕೆರೆ, ನದಿ ತೀರಗಳಿಗೆ ಜನರು ತೆರಳಬಾರದು. ವಿಶೇಷವಾಗಿ ಈ ಭಾಗಗಳಿಗೆ ಮಕ್ಕಳು ತೆರಳದಂತೆ ಪೋಷಕ್ರು ಮುನ್ನೆಚ್ಚರಿಕೆ ವಹಿಸಕೊಳ್ಳಬೇಕೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.