ಮಂಗಳೂರು, ಜು25(Daijiworld News/SS): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜನರಲ್ಲಿ ಆತಂಕ ಉಂಟು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರದಿಂದ ಬಳಲುತ್ತಿರುವ 32 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರತಿನಿತ್ಯ ಆಸ್ಪತ್ರೆಗೆ ದಾಖಲಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಸಾಮಾನ್ಯ ಜ್ವರಕ್ಕೂ ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದು, ಸಾರ್ವಜನಿಕರು ಹೆದರುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ನವೀನ್ ತಿಳಿಸಿದ್ದಾರೆ.
ಮಂಗಳೂರು ತಾಲೂಕಿನಲ್ಲಿ 31 ಮಂದಿ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ 23 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 13 ಮಂದಿ ಗುಣಮುಖರಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. 12 ಮಂದಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ಡೆಂಗ್ಯೂ ಬಾಧಿತ ಪ್ರದೇಶಗಳಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳಿಯವಾಗಿ ಪ್ರಾಥಮಿಕ ಕೇಂದ್ರದ ಸಿಬ್ಬಂದಿ ಮನೆ ಮನೆಗೆ ತೆರಳಿ ಮುಂಜಾಗ್ರತಾ ಕ್ರಮಗಳ ಮಾಹಿತಿ ನೀಡುತ್ತಿದ್ದಾರೆ. ತಾಲೂಕಿನ ಎಲ್ಲ ಪ್ರಾಥಮಿಕ ಕೇಂದ್ರಗಳಲ್ಲಿ ನಿಗಾ ವಹಿಸಲಾಗುತ್ತಿದೆ.
ಸೊಳ್ಳೆ ತಾಣಗಳಿರುವ ಜಾಗದ ಮಾಲೀಕರಿಗೆ ದಂಡ ವಿಧಿಸುವ ಕಾರ್ಯ ಮುಂದುವರಿದಿದೆ. 3 ತೆರೆದ ಪ್ರದೇಶ, 17 ನಿರ್ಮಾಣ ಹಂತದ ಕಟ್ಟಡಗಳನ್ನು ಜು.24ರಂದು ಸಮೀಕ್ಷೆ ಮಾಡಲಾಗಿದ್ದು, 9 ಪ್ರಕರಣಗಳಲ್ಲಿ 65 ಸಾವಿರ ರೂ. ದಂಡ ವಿಧಿಸಲಾಗಿದೆ.
ಮಳೆ ಆರಂಭವಾದರೂ ಸಂಗ್ರಹಿಸಿರುವ ನೀರನ್ನು ಚೆಲ್ಲಿ ಶುಚಿ ಮಾಡದೇ ಇದ್ದದ್ದರಿಂದಲೂ ಡೆಂಗ್ಯೂ ಹರಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಶಂಕಿತ ಡೆಂಗ್ಯೂ ಬಾಧಿತ ಪ್ರದೇಶಗಳಲ್ಲಿ ಫಾಗಿಂಗ್ ನಡೆಸಿರುವುದಲ್ಲದೆ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಗುತ್ತಿದೆ.