ಉಡುಪಿ, ಆ.06(Daijiworld News/SS): ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ವೇಳೆ ರೈಲಿನ ಮೇಲೆ ಮರ ಬಿದ್ದಿದ್ದು, ಈ ಹಿನ್ನಲೆ (16345) ನೇತ್ರಾವತಿ ಎಕ್ಸ್ಪ್ರೆಸ್ ರೈಲು ಸಂಚಾರ ಸೇವೆಯಲ್ಲಿ ವ್ಯತ್ಯಯವಾಗಿತ್ತು.
ಈಗಾಗಲೇ ಮುಂಬೈ ಸೇರಿದಂತೆ ಹಲವಡೆ ಮಳೆಯ ಆರ್ಭಟ ಜೋರಾಗಿದ್ದು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಕಡಲನಾಡು ಕರಾವಳಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದಿದೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ನದಿಗಳು ತುಂಬಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಆಗಸ್ಟ್ 8 ಹಾಗೂ 9ರಂದು ಕರಾವಳಿ ಭಾಗಗಳಲ್ಲಿ 205 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ.6, 7 ಹಾಗೂ 10ರಂದು 115 ಮಿ.ಮೀ ಗಿಂತ ಹೆಚ್ಚು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.