ಬಂಟ್ವಾಳ, ಆ 16 (Daijiworld News/SM): ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ಆ ರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಟಿ.ಡಿ.ಕ್ರಾಸ್ ನ ಸುಭಾಷ್ ನಗರ ನಿವಾಸಿ ಕೃಷ್ಣಪ್ಪ ಅವರ ಮಗ ನಂಜುಂಡ ಯಾನೆ ಪ್ರಸನ್ನ ಬಂಧಿತ ಆರೋಪಿ. ಈತ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ.
ಆದರೆ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ವಾರೆಂಟ್ ಆರೋಪಿಯಾದ ನಂಜುಂಡ ಇಂದು ಮದ್ಯಾಹ್ನದ ವೇಳೆ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಎಸ್. ಐ. ಚಂದ್ರಶೇಖರ್ ಹಾಗೂ ಸಿಬ್ಬಂದಿಗಳಾದ ಸುರೇಶ್ ಪಡಾರ್ ಹಾಗೂ ದೇವಪ್ಪ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇನ್ನು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.