ಮಂಗಳೂರು, ಸೆ 16(DaijiworldNews/SM): ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಎರಡು ಪ್ರಕರಣಗಳನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಫಾರೂಕ್(51), ಆಬಿದ್(19), ಜುಬೈರ್(22) ಬಂಧಿತ ಆರೋಪಿಗಳು.
ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ನಿಲ್ದಾಣದ ಬಳಿ ಆರೋಪಿ ಫಾರೂಕ್ ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈತನಿಂದ ಕಾರು, ಎರಡು ಕೆ.ಜಿ. ಗಾಂಜಾ ಸೇರಿದಂತೆ ಸುಮಾರು ೨ ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಆಬಿದ್ ಹಾಗೂ ಜುಬೈರ್ ಎಂಬ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳಿಂದ ಮೂರು ಕೆ.ಜಿ. ಗಾಂಜಾ, ಸುಮಾರು ಐವತ್ತು ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಗಳು, ಐವತ್ತು ಸಾವಿರ ರೂಪಾಯಿ ಮೌಲ್ಯದ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳ ವಿಚಾರಣೆ ಮುಂದುವರೆದಿದೆ.