ಬಂಟ್ವಾಳ, ನ.09(Daijiworld News/SS): ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ದಾಳಿ ಮಾಡಿ ಮದ್ಯ ಸಹಿತ ಆರೋಪಿಯನ್ನು ವಶಪಡಿಸಿಕೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡುರು ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ಮಧ್ವ ನಿವಾಸಿ ಸತೀಶ್ (47) ಎಂದು ಗುರುತಿಸಲಾಗಿದೆ.
ಇಲ್ಲಿನ ಕಾವಳಪಡುರು ಗ್ರಾಮದ ಶಾಲೆಯೊಂದರ ಸಮೀಪ ಕಿರಾಣಿ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಶೇಖರಿಸಿ ಮಾರಾಟ ಮಾಡುತ್ತಿದ್ದ 3.24 ಲೀಟರ್ ಮದ್ಯ,400 ರೂ ಹಣ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.