ಉಡುಪಿ, ನ 22 (DaijiworldNews/SM): ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮನೆ ಹಾನಿಗೀಡಾದ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ದೊರೆತಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಖುದ್ದು ಪರಿಶೀಲನೆ ನಡೆಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಮಾತನಾಡಿದರು. ಕಂದಾಯ ಇಲಾಖೆಯಿಂದ ಪ್ರಾಕೃತಿಕ ವಿಕೋಪ ಸಂತ್ರಸ್ತರ ಪಟ್ಟಿ ಪಡೆದು, ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳು ಖುದ್ದಾಗಿ ಸಂತ್ರಸ್ತರ ಮನೆಗೆ ಭೇಟಿ ನೀಡಿ, ಪರಿಹಾರ ಮೊತ್ತ ದೊರಕಿರುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ವಸತಿ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾಗುವಂತೆ ಗಮನ ಹರಿಸಬೇಕು. ಹಲವೆಡೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಅನರ್ಹರಿಗೂ ವಸತಿ ಯೋಜನೆಯಲ್ಲಿ ಮನೆ ಮಂಜೂರಾಗಲು ಪಿ.ಡಿ.ಓ ಗಳ ಮೇಲೆ ಒತ್ತಡ ಹೇರಿರುವ ಬಗ್ಗೆ ದೂರುಗಳು ಬಂದಿವೆ. ಅಮೇರಿಕಾ ದೇಶದಲ್ಲಿ ಉದ್ಯೋಗದಲ್ಲಿರುವವರಿಗೂ ವಸತಿ ಯೋಜನೆಯ ಮನೆ ಮಂಜೂರಾಗಿರುವ ಪ್ರಕರಣಗಳು ಇವೆ. ಈ ನಿಟ್ಟಿನಲ್ಲಿ ಬಡವರಿಗೆ ಮಾತ್ರ ಮನೆ ಮಂಜೂರುಗೊಳಿಸುವಲ್ಲಿ ಮುತುವರ್ಜಿ ವಹಿಸಬೇಕು. ಇದರಲ್ಲಿ ಯಾವುದೇ ದಾಕ್ಷಿಣ್ಯ ಇರಬಾರದು ಎಂದು ಲೋಕಾಯುಕ್ತ ನ್ಯಾಯಮೂರ್ತಿಗಳು ತಿಳಿಸಿದರು.