ಪುತ್ತೂರು, ನ 26 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಎಂಬಲ್ಲಿ ರೌಡಿಗಳ ತಂಡವೊಂದು ವ್ಯಕ್ತಿಯೋರ್ವನಿಗೆ ಗುಂಡು ಹಾರಿಸಿ ಪರಾರಿಯಾದ ಘಟನೆ ವರದಿಯಾಗಿದೆ.
ಪುತ್ತೂರು ಕಬಕದ ಕಲ್ಲಂದಡ್ಕ ನಿವಾಸಿ ಅಬ್ದುಲ್ ಖಾದರ್ (35) ದುಷ್ಕರ್ಮಿಗಳ ಗುಂಡೇಟಿನಿಂದ ಗಾಯಗೊಂಡವರು.
ಅಬ್ದುಲ್ ಅವರ ಎದೆಯ ಭಾಗಕ್ಕೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಪೂರ್ವ ದ್ವೇಷ ಹಿನ್ನೆಲೆ ನಡೆದಿದ್ದು, ವಿಟ್ಲ ಸಮೀಪದ ಬ್ಲೇಡ್ ಸಾದಿಕ್ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.