ಮುಲ್ಕಿ, ಡಿ 15 (DaijiworldNews/SM): ಇಲ್ಲಿನ ಶಿಮಂತೂರದ ಪರಂಕಿಲಾದಲ್ಲಿರುವ ನಿವಾಸದಲ್ಲಿ ಶನಿವಾರ ತಡರಾತ್ರಿ ಮಹಿಳೆಯೊಬ್ಬಳ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.
ಶಾರದಾ ಶೆಟ್ಟಿ(70) ಹತ್ಯೆಯಾದ ಮಹಿಳೆಯಾಗಿದ್ದಾರೆ. ತುಕರಾಮ ಶೆಟ್ಟಿ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆರೆಮನೆಯವನಾದ ಆರೋಪಿ ತುಕರಾಮ ಹಾಗೂ ಶಾರದಾ ಅವರಿಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಜಗಳವಾಗಿತ್ತು ಎನ್ನಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಕೃತ್ಯ ಎಸಗಿರುವುದಾಗಿ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಶಾರದಾ ಶೆಟ್ಟಿ ತಮ್ಮ ಮನೆಯಲ್ಲಿ ಒಂಟಿಯಾಗಿದ್ದರು. ಆರೋಪಿ ಆಕೆಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.