ಮಂಗಳೂರು, ಡಿ 18(Daijiworld News/MB) : "ಪೌರತ್ವ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ನಡೆದ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಕಳುಹಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು" ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಬುಧವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ ಅವರು, "ಕೆಲವು ಸಂಘಟನೆಗಳು ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಏಕಾಏಕಿ ರಸ್ತೆ ತಡೆ ಮಾಡಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಇದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು ಅವರ ಮೇಲೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಈ ರೀತಿ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ತಿಳಿಸಿದ್ದಾರೆ.
"ಡಿ. 20 ಹಾಗೂ 23ರಂದು ವಿವಿಧ ಸಂಘಗಳು ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದು ರವಾನೆ ಮಾಡಲಾಗುತ್ತಿತ್ತು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಧಾರ್ಮಿಕ ಮುಖಂಡರಲ್ಲಿ ಚರ್ಚೆ ನಡೆಸಲಾಗಿದ್ದು ಪ್ರತಿಭಟನೆ ಕೈಬಿಡಲು ನಿರ್ಧಾರ ಮಾಡಿದ್ದಾರೆ. ಹಾಗೆಯೇ ಈಗಾಗಲೇ ಸುಮಾರು 7 ಸಂಘಟನೆಗಳಿಗೆ ಪ್ರತಿಭಟನೆ ಮಾಡಲು ಅವಕಾಶ ನೀಡಲಾಗಿದೆ" ಎಂದು ಹೇಳಿದ್ದಾರೆ.