ಮಂಗಳೂರು. ಡಿ 21 (Daijiworld News/MSP): ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆ ಹಿಂಸಾತ್ಮಕ ಘಟನೆ ಹಾಗೂ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿರುವ ಘಟನೆ ಸಂಬಂಧ ಸಮಗ್ರವಾದ ವರದಿ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಪರಿಶೀಲಿಸಿ ಉನ್ನತ ಮಟ್ಟದ ಸಭೆಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಶನಿವಾರ ಮಧ್ಯಾಹ್ನ ಮಾತನಾಡಿದರು.
ಮಂಗಳೂರಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿವರ ಕೇಳಿದ್ದೇನೆ. ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅಹಿತಕರ ಘಟನೆ ನಡೆದ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದೇನೆ. ಘಟನೆಯ ಕುರಿತು ವರದಿ ತರಿಸಿಕೊಂಡು ಪರಿಶೀಲಿಸುತ್ತೇನೆ. ಜನರು ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ್ ಮಠಂದೂರು , ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ , ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ವೇದವ್ಯಾಸ್ ಕಾಮತ್ , ಶಾಸಕ ಭರತ್ ಶೆಟ್ಟಿ ಮುಂತಾದವರು ಹಾಜರಿದ್ದರು