ಉಡುಪಿ, ಡಿ 27 (DaijiworldNews/SM): ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 180 ಕೋಟಿ ರೂ. ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ಅವರು ಶುಕ್ರವಾರ, ಉಡುಪಿಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಕರಾವಳಿ ಭಾಗದಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ಅಂರ್ತಜಲದ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಪಶ್ವಿಮವಾಹಿನಿ ಯೋಜನೆಯಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ 180 ಕೋಟಿ ರೂ. ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಕಿಂಡಿ ಅಣೆಕಟ್ಟುಗಳ ನಿರ್ಮಾಣ ಕುರಿತು ಟೆಂಡರ್ ಪಡೆದ ಗುತ್ತಿಗೆದಾರರು, ಕಾಮಗಾರಿಗಳನ್ನು ಪೂರ್ಣಗೊಳಿಸದ ಕುರಿತು ದೂರುಗಳು ಬಂದಿದ್ದು, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಒಬ್ಬ ಗುತ್ತಿಗೆದಾರ ಗರಿಷ್ಟ 5 ಗುತ್ತಿಗೆ ಮಾತ್ರ ಪಡೆಯಲು ಅವಕಾಶವಿದೆ. ಇಲಾಖೆಯಲ್ಲಿ ಗುತ್ತಿಗೆ ಪಡೆಯಲು ಗುತ್ತಿಗೆದಾರರು ನೀಡುವ ಪ್ರಮಾಣಪತ್ರದಲ್ಲಿ, ವಾರ್ಷಿಕ ವಿವಿಧ ಇಲಾಖೆಯಿಂದ ಎಷ್ಟು ಕಾಮಗಾರಿ ಪಡೆದಿದ್ದಾರೆ ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.