ಪಾವಗಡ, ಫೆ 28: ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ತುಮಕೂರು ಜಿಲ್ಲೆಯ ಪಾವಗಡದಲ್ಲಿ ತಲೆ ಎತ್ತುತ್ತಿದ್ದು, ಸುಮಾರು 13 ಸಾವಿರ ಎಕರೆ ಜಾಗದಲ್ಲಿ ಈ ಬೃಹತ್ ಪಾರ್ಕ್ ನಿರ್ಮಾಣವಾಗಿದೆ. ಇದು ಸುಮಾರು 2700 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲಿದೆ.ಇದರ ಮೊದಲ ಹಂತದ ಪಾವಗಡ ತಾಲೂಕಿನ ತಿರುಮಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 600 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 1 ರಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.
2020ಕ್ಕೆ ದೇಶದಲ್ಲಿ 100 ಗಿಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಬೇಕು ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಅದರಂತೆ ಕರ್ನಾಟಕದಲ್ಲಿ ಈ ಬೃಹತ್ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದ್ದು ಕರ್ನಾಟಕ ಸೌರ ವಿದ್ಯುತ್ ಅಭಿವೃದ್ಧಿ ನಿಗಮ ಇದರ ನಿರ್ಮಾಣದ ಹೊಣೆ ವಹಿಸಿಕೊಂಡಿದೆ. ಈ ಪಾರ್ಕ್ 15 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ರೈತರಿಂದ 25 ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ಭೂಮಿಯನ್ನು ಪಡೆಯಲಾಗಿದೆ. ಸತತ 40 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಪಾವಗಡದಲ್ಲಿ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢೀಕರಿಸಬೇಕೆಂಬ ಉದ್ದೇಶದಿಂದ ಈ ಪಾರ್ಕ್ ನ್ನು ನಿರ್ಮಾಣ ಮಾಡಲಾಗುತ್ತಿದೆ.