ಮೈಸೂರು, ಮಾ 06 : ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಿದಂತೆ , ನಮ್ಮ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂಬುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಇಂತಹ ಆರೋಪವನ್ನು ಯಾರಾದರೂ ಸಾಬೀತುಮಾಡಿದರೆ ಮುಂದೆ ಒಂದು ಕ್ಷಣವೂ ರಾಜಕೀಯದಲ್ಲಿ ಮುಂದುವರಿಯುವುದಿಲ್ಲ ಎಂದು ಮೈಸೂರಿನ ಜಯಪುರದಲ್ಲಿ ಸಿಎಂ ಸವಾಲು ಹಾಕಿದ್ದಾರೆ.
ಈ ಬಾರಿಯ ಚುನಾವಣೆ ನನ್ನ ಕೊನೆಯ ಚುನಾವಣೆ , ಕೊನೆಯ ಸಾರಿ ನನಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತೇನೆ. ಮತ್ತೆಂದೂ ನಾನು ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಮೋದಿ ಈ ಹಿಂದೆ ಎರಡು ಬಾರಿ ಕರ್ನಾಟಕ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದರು. ಸಿದ್ದರಾಮಯ್ಯ ಸರ್ಕಾರ ಅಲ್ಲ `ಸೀದಾ ರೂಪಾಯಿ' ಸರ್ಕಾರ ಎಂದು ವ್ಯಂಗ್ಯವಾಡಿದ್ದರು.