ಮಂಗಳೂರು, ಮಾ 10: ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ರೆ ವೀಡಿಯೋ ರೆಕಾರ್ಡಿಂಗ್ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಎಚ್ಚರಿಸಿದ್ದಾರೆ.
ನಗರದ ಕಮಿಷನರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಕೇಳಿ ಬಂದ ದೂರಿಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ದಿನಗಳಲ್ಲಿ ಕುಡಿದು ವಾಹನ ಚಲಾಯಿಸಿದ್ರೆ ನೋಟಿಸ್ ನೀಡುವುದಿಲ್ಲ. ಬದಲಾಗಿ ಕೇಸು ದಾಖಲಿಸಿ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಸಿಟಿ ಬಸ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಮಾತನಾಡುವಾಗ ಸೂಕ್ತವಾಗಿ ಸ್ಪಂದಿಸುವುದಿಲ್ಲ. ಕೆಲವು ಬಸ್ಸುಗಳಲ್ಲಿ ಟಿಕೆಟ್ ನೀಡಲ್ಲ. ಬಸ್ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಉಡಾಫೆಯಿಂದ ವರ್ತಿಸುತ್ತಾರೆ, ಪಾರ್ಕಿಂಗ್ ವ್ಯವಸ್ಥೆಯಿದ್ದರೂ ವಾಹನ ನಿಲುಗಡೆ ಸರಿಯಾಗಿ ಮಾಡುವುದಿಲ್ಲ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.
ಸಾರ್ವಜನಿಕರ ದೂರುಗಳನ್ನು ಆಲಿಸಿದ ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಈ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.