ಬೆಂಗಳೂರು, ಮಾ 28 : ದೇಶಾದ್ಯಂತ ಕುತೂಹಲ ಮೂಡಿಸಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಪ್ರಚಲಿತದಲ್ಲಿರುವ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಕೆದರಿವೆ. ಇವುಗಳ ನಡುವೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆಗಳು ಬಿರುಸುಗೊಂಡಿದೆ. ಇನ್ನು ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಇಂದು ದಿನವಿಡೀ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಇಂದು ಟಿಕೆಟ್ ಹಂಚಿಕೆಯ ಬಗ್ಗೆ ಚರ್ಚಿಸಲಿದ್ದೇವೆ. ಬಳಿಕ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು . ಟಿಕೆಟ್ ಹಂಚಿಕೆಯ ಕೊನೆಯ ನಿರ್ಧಾರದ ಬಳಿಕ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು.