ಕಡಬ ಸೆ20: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ತಲೆ ಎತ್ತಿದ್ದ ಅಕ್ರಮ ಮದ್ಯದಂಗಡಿ ತೆರೆವಿಗಾಗಿ ಆರಂಭವಾಗಿದ್ದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ತೀವ್ರ ಸ್ವರೂಪಕ್ಕೆ ತಿರುಗಿದ ಪ್ರತಿಭಟನೆಗೆ ಪುತ್ತೂರು ತಾಲೂಕಿನ ೨ ಗ್ರಾಮಗಳ ಜನರು ಸಾಥ್ ನೀಡಿದ್ದಾರೆ. ಇದುವರೆಗೆ ಸಂಬಂಧಪಟ್ಟ ಯಾವುದೇ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ೨ ಗ್ರಾಮಗಳು ಸಂಪೂರ್ಣ ಬಂದ್ ಆಗಿದ್ದು, ಗ್ರಾಮಸ್ಥರು ತಮ್ಮ ಮಕ್ಕಳನ್ನೂ ಇಂದು ಶಾಲೆಗೆ ಕಳುಹಿಸದೆ ಪ್ರತಿಭಟನೆಗೆ ಇಳಿದಿದ್ದು ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದಾರೆ. ಬಾರ್ ಮಾಲೀಕ ಎ ಸಿ ಕುರಿಯನ್ ಉದ್ದಟನ ಪ್ರದರ್ಶಿಸಿದ್ದು ರಾಜಕೀಯ ಪ್ರಭಾವ ಬಳಸಿ ಮದ್ಯದಂಗಡಿ ನಡೆಸಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್, ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಈ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಮುಂಜಾಗೃತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.