ಏ, 15 : ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಿಂದ ಸ್ವರ್ಧಿಸುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆಬಿದ್ದಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜಾತಿ ಆಧಾರದ ಲೆಕ್ಕಾಚಾರವನ್ನು ಇಟ್ಟುಕೊಂಡು ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿಯಲ್ಲಿಯೂ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಡಿತ್ತು, ಆ ವಿಚಾರವಾಗಿ ಸ್ವತಃ ಸಿದ್ದರಾಮಯ್ಯ ನವರು ಬಾದಾಮಿಯ ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿಯವರನ್ನು ಮತ್ತು ಆ ಭಾಗದ ನಾಯಕರನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.
ಇವೆಲ್ಲಕ್ಕೂ ಪುಷ್ಟಿ ಕೊಡುವಂತೆ ಕಾಂಗ್ರೆಸ್ ಹೈ ಕಮಾಂಡ್ ಕೂಡ ಸಿದ್ದರಾಮಯ್ಯ ದ್ವಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮ್ಮತಿ ನೀಡಿತ್ತು. ಆದರೆ ಅಂತಿಮ ವೇಳೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿ ಕೇವಲ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.