ಮಂಗಳೂರು, ಏ.17: ಜಮ್ಮುವಿನ ಕಥುವಾದಲ್ಲಿ ನಡೆದಿರುವ ಎಂಟು ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಹಾಗೂ ಭೀಬತ್ಸ ಕೊಲೆ ಪ್ರಕರಣ, ಮತ್ತು ಉತ್ತರ ಪ್ರದೇಶದ ಕಥುವಾದಲ್ಲಿ ಶಾಸಕನಿಂದ ನಡೆದ ಬಾಲಕಿಯ ಅತ್ಯಾಚಾರ ದುಷ್ಕೃತ್ಯವನ್ನು ಖಂಡಿಸಿ ಕಾಂಗ್ರೆಸ್ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಏ.17 ರ ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಪ್ರಕರಣವನ್ನು ಖಂಡಿಸಿ , ಸರ್ಕಾರ ತನ್ನ ನಾಗರೀಕರಿಗೂ ರಕ್ಷಣೆ ನೀಡುವ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಾಗುತ್ತದೆ. ಆದರೆ ಕಥುವಾ ಮತ್ತು ಉನ್ನವೋ ಪ್ರಕರಣ ಕೇಂದ್ರ ಹಾಗೂ ಗುಜರಾತ್ ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ. ಗುಜರಾತ್ ನಲ್ಲಿ ಗೂಂಡಾ ಸರ್ಕಾರ ಆಡಳಿತ ನಡೆಸುತ್ತಿದ್ದು, ಯೋಗಿ ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ದೇಶದಲ್ಲಿ ಎಲ್ಲೆಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆಯೋ ಅಲ್ಲಿ ಗೂಂಡಾ ಹಾಗೂ ಅತ್ಯಾಚಾರಿಗಳು ತುಂಬಿತುಳುಕುತ್ತಿದ್ದಾರೆ. ಇವರಿಗೆ ಕಾನೂನು ಭಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಉನ್ನಾವೋದಲ್ಲಿ ನಡೆದ ಘಟನೆಗೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶ ಸರಕಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಯೋಗಿ ನೇತೃತ್ವದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಎಲ್ಲ ಸವಲತ್ತುಗಳನ್ನು ಒದಗಿಸುತ್ತಿದ್ದು, ಅಲ್ಲಿ ಶಾಂತಿ, ಸುವ್ಯವಸ್ಥೆ ನಿರೀಕ್ಷಿಸುವಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಕಳ್ಳಿಗೆ ತಾರನಾಥ್, ಮಾಜಿ ಮೇಯರ್ ಮಹಾಬಲ ಮಾರ್ಲ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಪ್ರವೀಣ್ಚಂದ್ರ ಆಳ್ವ, ಬಿ.ಜಿ.ಸುವರ್ಣ, ಟಿ.ಕೆ.ಸುಧೀರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.