ಬೆಂಗಳೂರು, ಏ 19 : ಬಿಎಸ್ ವೈ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬೇಳೂರು ಗೋಪಾಲಕೃಷ್ಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ನೀಡ ಹೊರಟಿದ್ದಾರೆ. ಬಿಜೆಪಿಯಿಂದ ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಬಯಸಿದ್ದ ಬೇಳೂರು ಗೋಪಾಲಕೃಷ್ಣ ತಮ್ಮದೇ ಪಕ್ಷದ ಅಭ್ಯರ್ಥಿಯಾಗಿರುವ ಹರತಾಳು ಹಾಲಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಪ್ರತಿಸ್ಪರ್ಧೆ ನೀಡಲಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ತೀವ್ರ ಆಕ್ರೋಶಗೊಂಡಿರುವ ಅವರು, ರಾಜ್ಯ ನಾಯಕರು ಮಾತುಕತೆ ನಡೆಸಿ ತಮಗಾದ ಅನ್ಯಾಯವನ್ನು ಸರಿಪಡಿಸುತ್ತಾರೆ ಎನ್ನುವ ಭರವಸೆಯಲ್ಲಿದ್ದರು. ಆದರೆ ಈ ಲೆಕ್ಕಚಾರವೆಲ್ಲವೂ ಬುಡಮೇಲಾಗಿದ್ದು, ಬೆಂಬಲಿಗರ ಸಭೆಯಲ್ಲಿ ತೀರ್ಮಾನಿಸಿದಂತೆ ಹಾಲಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದು, ಏಪ್ರಿಲ್ 22 ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಹರತಾಳು ಹಾಲಪ್ಪ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೊಡಲಾಗಿದೆ. ಇನ್ನು ಸಾಗರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.