ಬೆಂಗಳೂರು, ಮೇ 17: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆ ನಡೆಯುವ ಮೊದಲು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕುಗಳ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದೆ. ಸಹಕಾರಿ ಬ್ಯಾಂಕುಗಳಲ್ಲಿರುವ 1 ಲಕ್ಷದವರೆಗಿನ ಬೆಳೆ ಸಾಲಮನ್ನಾ ಮಾಡಿ ಜನತೆಗೆ ಕೊಟ್ಟ ಭರವಸೆ ಈಡೇರಿಸುತ್ತೇನೆ. ಈ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಸಂಜೆಯ ವೇಳೆಗೆ ಉತ್ತರ ಲಭಿಸಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರ ಸ್ವೀಕರಿಸಿ ಕೇವಲ ಒಂದೂವರೆ ಗಂಟೆಯ ಒಳಗಾಗಿ ಅತಿ ದೊಡ್ಡ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೈಗೊಂಡಿದ್ದು, ಈ ಹಿಂದೆ ತಾನು ಘೋಷಿಸಿದಂತೆ ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಅಂದರೆ ಕೇವಲ ಒಂದೂವರೆ ಗಂಟೆಯಲ್ಲೇ ಸಾಲ ಮನ್ನಾ ಎಂಬ ಘೋಷಣೆಯ ಕಡತಕ್ಕೆ ಸಹಿ ಹಾಕಿದ್ದಾರೆ.
ರಾಜ್ಯದ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಡಿರುವ ಬರೋಬ್ಬರಿ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ರಾಜ್ಯದ ರೈತರು ವಿವಿಧ ಕಾರಣಗಳಿಂದ ರಾಜ್ಯದ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಮಾಡಿರುವ ಕೃಷಿ ಸಾಲವನ್ನು ಬೇಷರತ್ತಾಗಿ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮನ್ನಾ ಮಾಡಿದ್ದಾರೆ.