ಬೆಂಗಳೂರು, ಜೂ 01: ರಾಜಕೀಯ ಹಸ್ತಕ್ಷೇಪಗಳಿಗೆ ಮಣಿಯದೆ, ನಿರ್ಭೀತಿಯಿಂದ ಕೆಲಸ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.
ಗೃಹ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಮುಖ್ಯಮಂತ್ರಿ, ಪೊಲೀಸ್ ಇಲಾಖೆಯ ಕಾರ್ಯದಲ್ಲಿ ನಾನು ಯಾವುದೇ ರೀತಿಯಲ್ಲೂ ಮಧ್ಯ ಪ್ರವೇಶಿಸುವುದಿಲ್ಲ. ಇದೀಗ ಸರ್ಕಾರ ಬದಲಾಗಿದೆ. ಹೊಸ ಸರ್ಕಾರ ಆಡಳಿತ ವಹಿಸಿಕೊಂಡಿದ. ಈ ಸಂಗತಿ ಜನಸಾಮಾನ್ಯರ ಗಮನಕ್ಕೆ ಬರಬೇಕು. ಪೊಲೀಸ್ ಇಲಾಖೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆ ನಡೆದರೂ ಅದನ್ನು ಸಹಿಸುವುದಿಲ್ಲ. ರೌಡಿಸಂ ಸೇರಿದಂತೆ ಎಲ್ಲ ಅಕ್ರಮ ಚಟುವಟಿಕೆಯನ್ನು ಮಟ್ಟಹಾಕಬೇಕು. ಅದರಲ್ಲೂ, ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ಹೆಚ್ಚಾಗಬಾರದು ಎಂದು ಸಲಹೆ ನೀಡಿದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್.ಡಿ.ಕೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ಕಾರಣಕ್ಕೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಸರ್ಕಾರದ ಕೆಲಸ ಮಾಡುವಾಗ ಅಭಿವೃದ್ಧಿ ವಿಷಯಕ್ಕಷ್ಟೆ ಗಮನ ಕೊಡಬೇಕು. ಜಾತಿ ಹಾಗೂ ಗುಂಪುಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಬೇಕು. ಒಂದು ಕುಟುಂಬದಂತೆ ಒಗ್ಗಟ್ಟಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ‘ಗೃಹ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ಸರ್ಕಾರ ರಕ್ಷಣೆ ನೀಡಲಿದೆ ಎಂದರು.