ಮಂಗಳೂರು,ಜೂ.೦೨: ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬಜ್ಪೆ ನಿವಾಸಿಯಗಿರುವ ಜಯರಾಜ್ ಎಂಬವರಿಗೆ ಸೇರಿದ ಹುಂಡೈ ಐ ೨೦ ಕಾರು ಬೆಂಕಿಗಾಹುತಿಯಾಗಿದೆ. ಕಾವೂರಿನಲ್ಲಿ ಕಾರು ನಿಲ್ಲಿಸಿದ್ದ ವೇಳೆ ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ . ತಕ್ಷಣ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.