ಬಂಟ್ವಾಳ, ಜೂ30: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿದ ಮಹಾ ಮಳೆಯಿಂದಾಗಿ ಉಕ್ಕಿಹರಿದ ನದಿ ನೀರು ಮತ್ತು ಅಕ್ರಮ ಮರಳುಗಾರಿಕೆಯಿಂದಾಗಿ ಕುಸಿದು ಬಿದ್ದ ಮುಲ್ಲರಪಟ್ನ ಸೇತುವೆ ಪ್ರದೇಶಕ್ಕೆ ಸಚಿವ ಯು ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಅವರು, ಈ ಸೇತುವೆ ಕುಸಿದು ಬೀಳಲು ಇರುವ ಸಾಧ್ಯತೆಗಳ ಬಗ್ಗೆ ತಿಳಿದುಕೊಂಡರು. ಮಾತ್ರವಲ್ಲ, ಇಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ಸ್ಥಳೀಯರು ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೆ ಈ ದೂರಿನ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿ ವಹಿಸಿಕೊಂಡಿದ್ದರು. ಈ ಕಾರಣದಿಂದಲೇ ಸೇತುವೆ ಕುಸಿದು ಬಿದ್ದಿದೆ ಎಂದು ಗಂಭೀರವಾಗಿ ಆರೋಪ ಮಾಡಿದರು.
ಈ ವೇಳೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಉಪಸ್ಥಿತರಿದ್ದು, ಇಲ್ಲಿನ ಜನತೆಗೆ ತೆರಳಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.