ಜು, 02:ಕೇಂದ್ರದ ಮಾಜಿ ಸಚಿವ ಧನಂಜಯ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ನಾಲ್ಕು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದರಿಂದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಆದರೆ, ಜು 01 ರ ಭಾನುವಾರದಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಹೀಗಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ (1996) ಧನಂಜಯ್ ಕುಮಾರ್ ಅವರು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು.ಮಂಗಳೂರು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ಗೆಲುವು ಸಾಧಿಸಿರುವ ಅವರು ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಬಿಜೆಪಿಯಿಂದ ಹೊರಬಂದಿದ್ದರು. ಇತ್ತೀಚಿನ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ನೇಮಕಗೊಂಡಿದ್ದರು.