ಉಡುಪಿ, ಜು ೧೦: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಇನ್ನೊಂದು ಪಾರ್ಶ್ವದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ. ಕೇರಳ ನಂಬರ್ ಬೋರ್ಡ್ ಹೊಂದಿರುವ ಕಾರು ಉಡುಪಿಯ ಬ್ರಹ್ಮಾವರದ ಆಕಾಶವಾಣಿ ವೃತ್ತದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಇನ್ನೊಂದು ಪಾರ್ಶ್ವಕ್ಕೆ ನುಗ್ಗಿ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಸಂದರ್ಭ ಕಾರು ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರು ಚಾಲಕ ಹಾಗೂ ಸಹ ಚಾಲಕರು ಪವಾಡ ಸದೃಶ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.