ಮಂಗಳೂರು, ಆ1: ಕಳೆದ 9 ವರ್ಷಗಳಿಂದ ಕುಂಟುತ್ತಾ ಸಾಗಿರುವ ಪಂಪ್ ವೆಲ್ ಫ್ಲೈಓವರ್ ಕಾಮಗಾರಿ ವಿಳಂಬವನ್ನು ಖಂಡಿಸಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜೆ ಆರ್ ಲೋಬೋ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಲೋಬೋ, ದೇಶದ ವಿವಿಧ ಕಡೆಗಳಲ್ಲಿ ಪ್ಲೈಓವರ್ ಕಾಮಗಾರಿಗಳು ಒಂದೂವರೆ ವರ್ಷದೊಳಗೆ ಮುಕ್ತಾಯವಾಗುತ್ತದೆ. ಆದರೆ ಪಂಪ್ವೆಲ್ನ ಈ ಕಾಮಗಾರಿಯನ್ನು ಆರಂಭಿಸಿ ಎಂಟು ವರ್ಷವಾದರೂ ಮುಕ್ತಾಯವಾಗಿಲ್ಲ. ಕೇಂದ್ರ ಸರಕಾರವನ್ನು ಪ್ರತಿನಿಧಿಸುತ್ತಿರುವ ಈ ಕ್ಷೇತ್ರದ ಸಂಸದರು ಇದಕ್ಕೆ ನೇರ ಹೊಣೆಗಾರರಾಗಿದ್ದಾರೆ. ಈ ಪ್ರತಿಭಟನೆಯ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡುತ್ತಿದೆ. ಸಂಸದ ನಳಿನ್ಕುಮಾರ್ ಕಟೀಲು ತಮ್ಮ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಲ್ಲಿ ಸಂಪೂರ್ಣ ವಿಫಲರಾಗಿರುವ ಪ್ರತೀಕ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.
ಈ ಸಂದರ್ಭ ಪ್ರತಿಭಟನಾಕಾರರು ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ವಿಧಾನಣ ಪರಿಷತ್ ಸದಸ್ಯ ಐವನ್ ಡಿ ಸೋಜ, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಮತ್ತು ಮಂಗಳೂರು ಉತ್ತರ ವಿಧಾಣ ಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.