ಬೆಂಗಳೂರು, ಸೆ 3(SM): ರಾಜ್ಯದ ಒಟ್ಟು 502 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣಕ್ಕಾಗಿ 300 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. 233 ಸರ್ಕಾರಿ ಪ್ರೌಢಶಾಲೆಗಳನ್ನು ನೆಲಸಮಗೊಳಿಸಿ ಮರುನಿರ್ಮಾಣಕ್ಕೆ 7,890.75 ಲಕ್ಷ ರೂಪಾಯಿಗಳ ಪ್ರಸ್ತಾವನೆಯನ್ನು ಈಗಾಗಲೇ ಇಲಾಖೆ ವತಿಯಿಂದ ಸಲ್ಲಿಸಲಾಗಿದ್ದು ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ 150 ಕೋಟಿ ರೂಪಾಯಿಗಳ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಬೇಕು ಎಂದರು. 2018-19ನೇ ಸಾಲಿನ ಆಯವ್ಯಯದಲ್ಲಿ ನಬಾರ್ಡ್ ಕಾಮಗಾರಿಗಳಿಗೆ 5.76 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು, ಅವಶ್ಯವಿರುವ 39.42 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.