ಹಾಸನ, ಸೆ14(SS): ನಮ್ಮ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಹಾಗಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.
ಸಮ್ಮಿಶ್ರ ಸರಕಾರ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಬೇರೆ ಅಲ್ಲ, ಸರ್ಕಾರ ಬೇರೆ ಅಲ್ಲ, ನಾವೆಲ್ಲರೂ ಒಂದೇ. ಬಿಜೆಪಿಯವರು ಸರ್ಕಾರ ಅಸ್ಥಿರ ಗೊಳಿಸಲು ಯತ್ನಿಸಿದರೆ ಅವರಿಗೆ ಸಿಎಂ ಕುಮಾರಸ್ವಾಮಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಏನೇ ಏರುಪೇರು ಮತ್ತು ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮುಖ್ಯುಮಂತ್ರಿ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹಾಗೂ ಉಭಯ ಪಕ್ಷಗಳ ರಾಜ್ಯಾಧ್ಯಕ್ಷರು ಒಟ್ಟು ಸೇರಿ ಸರಿಪಡಿಸಲಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.