ಮಂಗಳೂರು, ಸೆ 16(SM): ವಾಮಂಜೂರು ಪರಿಸರದಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿಗಳ ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಾಮಂಜೂರು ನಿವಾಸಿ ಅಜರುದ್ದಿನ್(26) ಬಂಧಿತ ಆರೋಪಿ. ಪೊಲೀಸರು ಜಪ್ಪಿನಮೊಗರು ಎಂಬಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ, ಆರೋಪಿ ಸ್ಕಾರ್ಫಿಯೋ ವಾಹನದಲ್ಲಿ ಬ್ಯಾಟರಿಗಳು ಹಾಗೂ ಕಬ್ಬಿಣದ ಶೀಟ್ ಗಳನ್ನು ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಸಂದರ್ಭ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೀಫ್ ಎಂಬಾತ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಅಜರುದ್ದಿನ್ ಎಂಬಾತನ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಪ್ರಕರಣ ಕೂಡ ದಾಖಲಾಗಿದೆ. ಪ್ರಸ್ತುತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವಾದ ರೂ 40,000/- ಮೌಲ್ಯದ ಬ್ಯಾಟರಿಗಳನ್ನು ಮತ್ತು ಇತರ ಸೊತ್ತುಗಳನ್ನು ಸಾಗಾಟ ಮಾಡುತ್ತಿದ್ದ ಸ್ಕಾರ್ಫಿಯೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಒಟ್ಟು ನಾಲ್ಕೂವರೆ ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.